ತಾಯಿಗೆ ಮಗಳ ಅಶ್ಲೀಲ ಫೋಟೋ ಕಳಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಕಿಡಿಗೇಡಿಗಳ ಬಂಧನ!
ಚಿಕ್ಕಮಗಳೂರು: ಮಗಳ ಅಶ್ಲೀಲ ಚಿತ್ರಗಳನ್ನು ತಾಯಿಗೆ ಕಳುಹಿಸಿ, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಲಕ್ಕವಳ್ಳಿ ಮತ್ತು ಸೆನ್ (CEN) ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ನಿವಾಸಿಗಳಾದ ಅಕ್ಷಯ್ ಮತ್ತು ಸಾಹುಲ್ ಬಂಧಿತ ಆರೋಪಿಗಳು. ಇವರಿಬ್ಬರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಮೂಲದ ಮಹಿಳೆಯೊಬ್ಬರಿಗೆ ಬೆಂಗಳೂರು ಮೂಲದ ‘ಯೋಗೀಶ್’ ಎಂಬ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತರು, ಅವರ 25 ವರ್ಷದ ಮಗಳ ಅಶ್ಲೀಲ ಫೋಟೋಗಳನ್ನು ಕಳುಹಿಸಿದ್ದರು. ಅಷ್ಟೇ ಅಲ್ಲದೆ, ತಕ್ಷಣ ಹಣ ನೀಡಬೇಕು, ಇಲ್ಲದಿದ್ದರೆ ಈ ಫೋಟೋಗಳನ್ನು ಫೇಸ್ಬುಕ್, ವಾಟ್ಸಾಪ್ ಹಾಗೂ ಇನ್ ಸ್ಟಾಗ್ರಾಮ್ ಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆರೋಪಿಗಳು ಪ್ರತಿದಿನ ರಾತ್ರಿ ತಾಯಿಗೆ ಫೋನ್ ಮಾಡಿ ಹಣಕ್ಕಾಗಿ ತೀವ್ರವಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ.
ಕಿಡಿಗೇಡಿಗಳ ಕಾಟದಿಂದ ಬೇಸತ್ತ ನೊಂದ ಮಹಿಳೆ ತಕ್ಷಣ ಲಕ್ಕವಳ್ಳಿ ಹಾಗೂ ಚಿಕ್ಕಮಗಳೂರು ಸೆನ್ (CEN) ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ತಾಂತ್ರಿಕ ಹಾಗೂ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಜಂಟಿ ಪೊಲೀಸ್ ತಂಡ, ದೂರು ದಾಖಲಾದ ಕೇವಲ 24 ಗಂಟೆಗಳ ಒಳಗಾಗಿ ಇಬ್ಬರೂ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























