ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್: ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ದಾರುಣ ಸಾವು!

13/06/2026

ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ವೈಟ್‌ ಫೀಲ್ಡ್ (Whitefield) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಮೃತರನ್ನು ತಾಯಿ ಕಾಂತಾ ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಅವರ ಮಗಳು ನೇಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಂತಾ ಅವರು ತಮ್ಮ ಮಗಳು ನೇಹಾ ಜೊತೆ ದ್ವಿಚಕ್ರ ವಾಹನದಲ್ಲಿ ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿದ್ದ ಗುಂಡಿ ಸರಿಯಾಗಿ ಕಾಣಿಸದೇ, ವಾಹನವು ಗುಂಡಿಗೆ ಬಿದ್ದು ಸ್ಕಿಡ್ ಆಗಿದೆ. ಇದರಿಂದಾಗಿ ತಾಯಿ–ಮಗಳಿಬ್ಬರೂ ರಸ್ತೆಯ ಮೇಲೆ ಕೆಳಗೆ ಬಿದ್ದಿದ್ದಾರೆ.

ಇದೇ ಸಮಯದಲ್ಲಿ ತಾಯಿ ಕಾಂತಾ ಅವರು ಕೆಳಗೆ ಬೀಳುತ್ತಿದ್ದಂತೆ, ಅವರ ಹಿಂದಿನಿಂದ ಬರುತ್ತಿದ್ದ ಶಾಲಾ ಬಸ್ ಅವರ ಮೇಲೆ ಹರಿದಿದೆ. ಪರಿಣಾಮವಾಗಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಅಪಘಾತದ ತೀವ್ರತೆಗೆ ಕಾಂತಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಮಗಳು ನೇಹಾ ಯಾವುದೇ ದೊಡ್ಡ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ರಸ್ತೆ ಗುಂಡಿಗಳ ನಿರ್ಲಕ್ಷ್ಯಕ್ಕೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version