ಉಡುಪಿ: ಸರಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮನವಿ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಅವರ ನಿವಾಸದಲ್ಲಿ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ರವರು ಭೇಟಿಯಾಗಿ, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಸಮಸ್ಯೆಗಳ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಬೇಕೆಂದು ಮನವಿ ಪತ್ರ ನೀಡಿದರು .
ಮನವಿ ಪತ್ರ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಮನವಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಶಾಲಾ ಪ್ರಾರಂಭದಲ್ಲಿ ಖಾಯಂ ಶಿಕ್ಷಕರನ್ನು ನೇಮಿಸಬೇಕು ಹಾಗೂ ಶಿಕ್ಷಕರ ಕೊರತೆಯನ್ನು ನೀಗಿಸಬೇಕು, ಶಾಲಾ ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಒದಗಿಸಬೇಕು, ಈಗಾಗಲೇ ಸರಕಾರಿ ಶಾಲೆಗಳಲ್ಲಿ ಪ್ರಾರಂಭಗೊಂಡಿರುವ ಎಲ್ ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವನ್ನು ಒದಗಿಸಬೇಕು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡವನ್ನು ಆದಷ್ಟು ಬೇಗನೆ ದುರಸ್ತಿಗೊಳಿಸುವುದು, ಶೈಕ್ಷಣಿಕ ಅವಧಿಯ ಮಧ್ಯದಲ್ಲಿ ಶಾಲಾ ಶಿಕ್ಷಕರನ್ನು ವರ್ಗಾವಣೆ ಮಾಡಕೂಡದು, ಎಸ್ ಡಿ ಎಂ ಸಿ ಸದಸ್ಯರಿಗೆ ಶಿಕ್ಷಣ ಇಲಾಖೆಯ ಹೊರತುಪಡಿಸಿ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡುವುದು,
ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ಮತ್ತು ಆರು ತಿಂಗಳಿಗೊಮ್ಮೆ ಜಿಲ್ಲಾಮಟ್ಟದಲ್ಲಿ ಎಸ್ ಡಿ ಎಂ ಸಿ ಸದಸ್ಯರುಗಳಿಗೆ ಸಾಮರ್ಥ್ಯ ವರ್ಧನ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳುವುದು, ಶಾಲಾ ಅನುದಾನವನ್ನು ಹೆಚ್ಚಿಸಿ ಕೂಡಲೇ ಬಿಡುಗಡೆಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97