ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ದಾರುಣ ಸಾವು
ಉಡುಪಿ: ಬಟ್ಟೆ ತೊಳೆಯಲು ತೆರಳಿದ್ದ ಇಬ್ಬರು ಏಳನೇ ತರಗತಿಯ ಬಾಲಕಿಯರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ಸಮೀಪದ ಹೊಸಾಡು ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತ ಬಾಲಕಿಯರನ್ನು ಸುನೀತಾ (13) ಮತ್ತು ವೈಶಾಲಿ (13) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಹೊಸಾಡು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾಗಿದ್ದು, ಮುಲ್ಲಿಕಟ್ಟೆಯ ಗುಡಿಸಲಿನಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು.
ಭಾನುವಾರ ಸಂಜೆ ಸುಮಾರು 4 ಗಂಟೆಗೆ ಗುಡಿಸಲಿನ ಐವರು ಮಕ್ಕಳು ಕೊಪ್ಪರಿಗೆಯ ಗುಡ್ಡೆಯಲ್ಲಿರುವ ಕಡುಬಿನ್ ಕೆರೆಗೆ ಬಟ್ಟೆ ತೊಳೆಯಲು ತೆರಳಿದ್ದರು. ಕೆರೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಸುನೀತಾ ಮತ್ತು ವೈಶಾಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ತಂಡ, ಕುಂದಾಪುರದ ತುರ್ತು ಸ್ಪಂದನಾ ಘಟಕ, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿ, ಬಾಲಕಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಪವನ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ತೀವ್ರ ಶೋಕ ತಂದೊಡ್ಡಿದೆ.




























