ರೀಲ್ಸ್ ಮಾಡುತ್ತಿದ್ದ ಬಾಲಕಿಗೆ ಕಿರುಕುಳ ನೀಡಿದ ವಿಡಿಯೋ ವೈರಲ್; ಐವರು ಯುವಕರು ಪೊಲೀಸರ ವಶಕ್ಕೆ

samastipur bihar
24/09/2026

ಸಮಸ್ತಿಪುರ (ಬಿಹಾರ): ಬಿಹಾರದ ಜಮುಯಿಯಲ್ಲಿ ಬಾಲಕಿಯೊಬ್ಬಳ ಮೇಲೆ ನಡೆದ ದೌರ್ಜನ್ಯದ ಬೆನ್ನಲ್ಲೇ, ಸಮಸ್ತಿಪುರ ಜಿಲ್ಲೆಯಲ್ಲೂ ಅಂಥದ್ದೇ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ರಸ್ತೆ ಬದಿ ರೀಲ್ಸ್ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಯುವಕರ ಗುಂಪೊಂದು ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಐವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ವರದಿಗಳ ಪ್ರಕಾರ, ಬಾಲಕಿ ತನ್ನ ಮೊಬೈಲ್‌ನಲ್ಲಿ ರಸ್ತೆ ಬದಿ ರೀಲ್ಸ್ ಮಾಡುತ್ತಿದ್ದಳು. ಈ ವೇಳೆ ಬೈಕ್‌ನಲ್ಲಿ ಬಂದ ಕೆಲ ಯುವಕರು ಆಕೆಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ಬಾಲಕಿ ಯುವಕರ ಹಿಡಿತದಿಂದ ತಪ್ಪಿಸಿಕೊಳ್ಳಲು ಪರದಾಡುವುದು ಮತ್ತು ಸಹಾಯಕ್ಕಾಗಿ ತನ್ನ ಸಹೋದರರನ್ನು ಪದೇ ಪದೇ ಕರೆಯುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇಷ್ಟಾದರೂ ದುಷ್ಕರ್ಮಿಗಳು ಆಕೆಗೆ ಕಿರುಕುಳ ನೀಡುವುದನ್ನು ಮುಂದುವರಿಸಿ, ಬಲವಂತವಾಗಿ ಎಳೆದುಕೊಂಡು ಹೋಗಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲಿದ್ದ ವ್ಯಕ್ತಿಯೊಬ್ಬರು ಈ ಸಂಪೂರ್ಣ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದು, ವಿಡಿಯೋ ಕ್ಷಣಮಾತ್ರದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಕರ್ಪುರಿಗ್ರಾಮ್ ಪೊಲೀಸ್ ಠಾಣೆಯ ತಂಡವು ತಕ್ಷಣ ಕಾರ್ಯಪ್ರವೃತ್ತವಾಯಿತು. ವಿಡಿಯೋದ ದೃಶ್ಯಾವಳಿಗಳ ಆಧಾರದ ಮೇಲೆ ಶಂಕಿತರನ್ನು ಗುರುತಿಸಿದ ಪೊಲೀಸರು, ಐವರು ಯುವಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಸಮಸ್ತಿಪುರ ಎಸ್‌.ಪಿ. ಅರವಿಂದ್ ಪ್ರತಾಪ್ ಸಿಂಗ್ ಮಾತನಾಡಿ, “ಯುವಕರ ಗುಂಪೊಂದು ಬಾಲಕಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಗಮನಕ್ಕೆ ಬಂದ ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ. ಐವರು ಯುವಕರನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ವಿಚಾರಣೆ ಮುಂದುವರಿದಿದೆ. ಕೂಡಲೇ ಎಫ್‌ ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಘಟನೆ ನಡೆದಾಗ ಸ್ಥಳದಲ್ಲಿದ್ದ ಇತರರ ಬಗ್ಗೆ ಮತ್ತು ವೈರಲ್ ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ತನಿಖೆ ಮುಂದುವರಿದಿದೆ. ಇಲ್ಲಿಯವರೆಗೆ ಸಂತ್ರಸ್ತೆ ಅಥವಾ ಆಕೆಯ ಕುಟುಂಬದವರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler
Exit mobile version