ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯನ್ನು ಥಳಿಸಿ ಕೊಂದು ಚಿನ್ನಾಭರಣ, ಹಣ ದರೋಡೆ!
ಬೆಳ್ತಂಗಡಿ: ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಜು.23 ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲೇ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದು, ಮಗ ಮತ್ತು ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ನಂತರ ಹೊರಗಡೆ ಬಂದು ನೋಡಿದಾಗ ಅಜ್ಜಿ ಅಕ್ಕು ಅವರು ತಮ್ಮ ಮನೆಯ ಸಮೀಪದ ಹಟ್ಟಿಹಯ ಹಿಂದೆ ಬಿದ್ದಿರುವುದು ಕಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ.
ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ಯಾರೋ ದರೋಡೆಗೈದಿರುವುದು ಬೆಳಕಿಗೆ ಬಂದಿದೆ. ಯಾರೋ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಅವರು ಚಿನ್ನಾಭರಣ ದರೋಡೆಗೈದಿರಬೇಕೆಂದು ಶಂಕಿಸಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























