ಕ್ಯಾಬ್‌ ಗೆ ಕಾಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ - Mahanayaka

ಕ್ಯಾಬ್‌ ಗೆ ಕಾಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

stop rape
28/07/2026

ಬೆಂಗಳೂರು: ರಸ್ತೆಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲ್ಕೆರೆಯ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ.

ಭಾನುವಾರ ರಾತ್ರಿ ಮಹಿಳೆಯೊಬ್ಬರು ಕ್ಯಾಬ್‌ ಗೆ ಕಾಯುತ್ತಿದ್ದ ವೇಳೆ ಸ್ಕೂಟರ್‌ನಲ್ಲಿ ಬಂದ ಆರೋಪಿ ಅವರ ಬಳಿ ಅಸಭ್ಯವಾಗಿ ಮಾತನಾಡಿ ಕಿರುಕುಳ ನೀಡಿದ್ದಾನೆ.

ಮಹಿಳೆಯು ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಸಿದಾಗ ಆರೋಪಿ ನಿಂದಿಸಲು ಪ್ರಾರಂಭಿಸಿದ್ದಾನೆ. ಈ ವೇಳೆ ಮಹಿಳೆ ಧೈರ್ಯ ತೋರಿ ಘಟನೆಯನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಇದನ್ನು ಗಮನಿಸಿದ ಆರೋಪಿ ತಕ್ಷಣವೇ ಸ್ಕೂಟರ್‌ನಲ್ಲಿ ಅಲ್ಲಿಂದ ಪರಾರಿಯಾಗಿದ್ದಾನೆ.

ಘಟನೆಯ ವಿಡಿಯೋ ಹಾಗೂ ಆರೋಪಿಯ ಸ್ಕೂಟರ್ ನಂಬರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮಹಿಳೆ, ಬೆಂಗಳೂರು ನಗರ ಪೊಲೀಸರನ್ನು ಟ್ಯಾಗ್ ಮಾಡಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು. “ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳದ ವಿರುದ್ಧ ಧ್ವನಿ ಎತ್ತಬೇಕು, ಮೌನವು ಅಪರಾಧಿಗಳಿಗೆ ಧೈರ್ಯ ನೀಡುತ್ತದೆ” ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ಸಾಮಾಜಿಕ ಜಾಲತಾಣದ ಪೋಸ್ಟ್‌ ಗೆ ತಕ್ಷಣ ಸ್ಪಂದಿಸಿದ ಪೊಲೀಸರು, ಮಹಿಳೆಯಿಂದ ದೂರು ಪಡೆದುಕೊಂಡಿದ್ದಾರೆ. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ