ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್ | ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ
ಬೆಂಗಳೂರು: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನ ಮೋಟಮ್ಮ ವಿರುದ್ಧ ಇತ್ತೀಚೆಗೆ ಕೆಲ ಭಿನ್ನಮತೀಯರು ನೀಡಿದ್ದ ದೂರಿನ ಬೆನ್ನಲ್ಲೇ, ಶುಕ್ರವಾರ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ತಮ್ಮ ನಿಲುವು ಸ್ಪಷ್ಟಪಡಿಸಿದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬ್ಲಾಕ್ ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಹಾಗೂ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿ, ಭಿನ್ನಮತೀಯರು ಮಾಡಿರುವ ಆರೋಪಗಳಿಗೆ ವಿವರವಾದ ಉತ್ತರ ನೀಡಿದರು.
ಶಾಸಕಿ ನಯನ ಮೋಟಮ್ಮ ಅವರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಸಹಿಸದ ಕೆಲವರು ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮುಖಂಡರು ತಿಳಿಸಿದರು.
ಇದೇ ವೇಳೆ, ನಯನ ಮೋಟಮ್ಮ ಅವರು ಯಾವುದೇ ಸಂಘ ಪರಿವಾರದ ಮುಖಂಡರೊಂದಿಗೆ ರಾಜಕೀಯ ಉದ್ದೇಶದಿಂದ ವೇದಿಕೆ ಹಂಚಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಗಣಪತಿ ಕಾರ್ಯಕ್ರಮವೊಂದರಲ್ಲಿ ಪ್ರಮೋದ್ ಮುತಾಲಿಕ್ ಭಾಗವಹಿಸಿದ್ದ ವೇಳೆ ನಯನ ಮೋಟಮ್ಮ ಕೂಡ ಅದೇ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆ ಘಟನೆಯನ್ನು ತಪ್ಪಾಗಿ ಬಿಂಬಿಸಿ ರಾಜಕೀಯವಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಾ, ಎಲ್ಲ ವರ್ಗದ ಜನರನ್ನು ಹಾಗೂ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಸಾಗುವ ಕೆಲಸವನ್ನು ಶಾಸಕಿ ನಯನ ಮೋಟಮ್ಮ ಮಾಡುತ್ತಿದ್ದಾರೆ ಎಂದು ಮುಖಂಡರು ಕೆಪಿಸಿಸಿ ಅಧ್ಯಕ್ಷರಿಗೆ ವಿವರಿಸಿದರು.
ಇತ್ತೀಚೆಗೆ ಭಿನ್ನಮತೀಯರು ಸಲ್ಲಿಸಿದ್ದ ದೂರಿಗೆ ಪ್ರತಿಯಾಗಿ ಈ ವಿವರಣೆಯನ್ನು ನೀಡಲಾಗಿದ್ದು, ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಮುಖಂಡರು ಕೆಪಿಸಿಸಿ ಅಧ್ಯಕ್ಷರ ಮುಂದೆ ಮಂಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























