ಯೋಗೀಶಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ನಾಳೆ ಪ್ರಕಟ

vinay kulkarni
16/04/2026

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿದೆ. ಇವರಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ನಾಳೆ (ಶುಕ್ರವಾರ) ಪ್ರಕಟಿಸಲಾಗುವುದು.

ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಅವರನ್ನು 2016ರಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ, ವಿನಯ್ ಕುಲಕರ್ಣಿ ಅವರನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಿತ್ತು. ಸುದೀರ್ಘ ವಿಚಾರಣೆಯ ನಂತರ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯವು ಈ ತೀರ್ಪು ನೀಡಿದೆ.

ಬುಧವಾರವಷ್ಟೇ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಗುರುವಾರ ಶಿಕ್ಷೆಯ ಪ್ರಮಾಣದ ಕುರಿತು ವಾದ-ಪ್ರತಿವಾದಗಳು ನಡೆದವು.

ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಕಠಿಣ ಶಿಕ್ಷೆಗೆ ಆಗ್ರಹಿಸಿ ವಾದ ಮಂಡಿಸಿದರು.

ಆರೋಪಿಗಳ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಕಡಿಮೆ ಶಿಕ್ಷೆ ವಿಧಿಸುವಂತೆ ಕೋರಿ ವಾದ ಮಂಡಿಸಿದರು.  ಎಲ್ಲಾ ವಾದಗಳನ್ನು ಆಲಿಸಿದ ನ್ಯಾಯಾಲಯವು ಶಿಕ್ಷೆಯ ವಿವರಗಳನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ. ಇದರಿಂದಾಗಿ ವಿನಯ್ ಕುಲಕರ್ಣಿ ಮತ್ತು ಇತರ 16 ಮಂದಿಗೆ ಎಂತಹ ಶಿಕ್ಷೆ ಸಿಗಲಿದೆ ಎಂಬುದು ನಾಳೆ ಅಧಿಕೃತವಾಗಿ ತಿಳಿಯಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version